ಕಲ್ಲುಗುಂಡಿ: ಗ್ರಾಮದ ಅಭಿವೃದ್ಧಿಯಲ್ಲಿ ಮುಂಚೂಣಿಯ ಪಾತ್ರವಹಿಸಬೇಕಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಯೊಬ್ಬರು ಈಗ ತಮ್ಮ ಕಚೇರಿಯ ನೌಕರರಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸರಿತಾ ಒಲ್ಗಾ ಡಿಸೋಜ ನೌಕರರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎನ್ನುವ ದೂರಿನ ಪ್ರತಿಯೊಂದು ನ್ಯೂಸ್ ನಾಟೌಟ್ ಗೆ ಲಭ್ಯವಾಗಿದೆ. ಈ ಪತ್ರದಲ್ಲಿ ತಮ್ಮ ಮೇಲಿನ ದೌರ್ಜನ್ಯವನ್ನು ಸ್ವತಃ ಖಾಯಂ ನೌಕರರು ಖಂಡಿಸಿದ್ದಾರೆ, ಮಾತ್ರವಲ್ಲ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯವರಿಗೆ ದೂರು ಕೂಡ ನೀಡಿದ್ದಾರೆ. ಗೋಪಮ್ಮ, ಮಧುರಾ, ಭರತ್ ಕೆ.ಎಸ್, ಭೋಜಪ್ಪ, ಸವಿತಾ ಯು, ಹರ್ಷಿತ್ ಕೆ.ಎಸ್ ಅವರ ಹೆಸರುಗಳು ದೂರು ನೀಡಿದವರಾಗಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಖಾಯಂ ನೌಕರರಾಗಿ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇವೆ. ಆದರೆ ನಮ್ಮ ಪಂಚಾಯತ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸರಿತಾ ಒಲ್ಗಾ ಡಿಸೋಜ ಇವರು ನಮ್ಮನ್ನು ಬೆದರಿಸಿ, ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ನಮಗೆ ಕೆಲಸ ನಿರ್ವಹಿಸಲು ಕಷ್ಟವಾಗುತ್ತಿದೆ. ಮಾನಸಿಕವಾಗಿ ಕುಗ್ಗಿ ಹೋಗಿದ್ದೇವೆ. ನಮಗೆ ನ್ಯಾಯ ಒದಗಿಸಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯವರಿಗೆ ನೀಡಿದ ದೂರಿನ ಪತ್ರದಲ್ಲಿ ತಿಳಿಸಲಾಗಿದೆ.


















