ನ್ಯೂಸ್ ನಾಟೌಟ್: ಸಿಸಿಬಿ ಪೊಲೀಸರ ತಂಡವೊಂದು ಮಂಗಳೂರಿನ ಬಂಟ್ಸ್ ಹಾಸ್ಟೇಲ್ ರಸ್ತೆಯ ಫ್ಲ್ಯಾಟ್‌ವೊಂದಕ್ಕೆ ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇದೇ ವೇಳೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತನನ್ನು ನೀಲ್ ಕಿಶೋರಿಲಾಲ್ ರಾಮ್ ಜಿ ಶಾ(38 ) ಬಂಧಿತ ಆರೋಪಿ. ಈತನಿಂದ ಒಟ್ಟು 2 ಕೆ.ಜಿ. ತೂಕದ ರೂ. 50,000 ಮೌಲ್ಯದ ಗಾಂಜಾ 2 ಮೊಬೈಲ್ ಫೋನ್, ನಗದು ರೂ.7000 , ಡಿಜಿಟಲ್ ತೂಕ ಮಾಪನ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ಸುಮಾರು ರೂ.78,000 ಎಂದು ಅಂದಾಜಿಸಲಾಗಿದೆ. ಬಂಟ್ಸ್ ಹಾಸ್ಟೆಲ್ ಪರಿಸರದ ಫ್ಲ್ಯಾಟ್ ವೊಂದರಲ್ಲಿ ಗಾಂಜಾವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಶ್ಯಾಮ್ ಸುಂದರ್ ಎಚ್.ಎಂ. ನೇತೃತ್ವದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಯು ಅಕ್ರಮವಾಗಿ ಮಾದಕ ವಸ್ತುಗಳನ್ನು ವಿಶಾಖಪಟ್ಟಣದಿಂದ ಖರೀದಿಸಿ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ. ಈ ಪ್ರಕರಣದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದಾರೆ. ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಂಗಳೂರು ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


















