ನ್ಯೂಸ್‌ನಾಟೌಟ್: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಸಮೀಪ ಸೋಮವಾರ ಬೆಳಗ್ಗೆ ಆನೆ ದಾಳಿಯಿಂದ ಇಬ್ಬರು ಮೃತಪಟ್ಟ ಬಳಿಕ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಈಗ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ ಆಫರೇಷನ್ ಎಲಿಫೆಂಟ್ ಕಾರ್ಯಾಚರಣೆ ಆರಂಭಿಸಿದೆ. ಮಂಗಳವಾರ ಮುಂಜಾನೆಯಿಂದಲೇ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದ್ದು, ಕಾಡಾನೆ ಸೆರೆಹಿಡಿಯಲು ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ ಕಾಡಾನೆ ಸೆರೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ, ಕಂಜನ್ ಹಾಗೂ ಮಹೇಂದ್ರ ಎಂಬ ಸಾಕಾನೆಗಳು ಕಾರ್ಯಾಚರಣೆಗೆ ಕರತರಲಾಗಿದೆ. ಲಾರಿಗಳ ಮೂಲಕ ಆನೆಗಳು ಸೋಮವಾರ ರಾತ್ರಿ ಕಡಬಕ್ಕೆ ಆಗಮಿಸಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಡ್ರೋನ್ ಬಳಸಿ ಕಾಡಾನೆಯ ಚಲನವಲನಗಳನ್ನು ಪತ್ತೆ ಹಚ್ಚುತ್ತಿದ್ದಾರೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್, ಎಸಿಎಫ್ ಪ್ರವೀಣ್ ಕುಮಾರ್, ವಲಯ ಅರಣ್ಯಾಧಿಕಾರಿಗಳಾದ ಎನ್.ಮಂಜುನಾಥ್, ಆರ್.ಗಿರೀಶ್, ರಾಘವೇಂದ್ರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದಾರೆ. ನಾಗರಹೊಳೆ ಹಾಗೂ ಮಂಗಳೂರಿನಿಂದ ತಜ್ಞ ವೈದ್ಯಾಧಿಕಾರಿಗಳ ತಂಡವೂ ಆಗಮಿಸಿವೆ. ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ಅರಣ್ಯ ಇಲಾಖೆಯು ಕಾಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಆರಂಭಿಸಿದೆ.
ಇಬ್ಬರನ್ನು ಬಲಿ ಪಡೆದ ಆನೆಯನ್ನು ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಪಟ್ಟು ಹಿಡಿದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿ ರವಿಕುಮಾರ್.ಎಂ.ಆರ್, ಡಿಎಫ್ಒ ದಿನೇಶ್ ಕುಮಾರ್ ಕಾಡಾನೆಯನ್ನು ಸೆರೆ ಹಿಡಿದು ಸ್ಥಳಾಂತರಿಸುವ ಭರವಸೆ ನೀಡಿದ್ದರು.


















