ನ್ಯೂಸ್ ನಾಟೌಟ್: ಬಜೆಟ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ದೊಡ್ಡ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅಂತಹ ಅಭಿವೃದ್ಧಿ ಮಂತ್ರಗಳಲ್ಲಿ ಆರೋಗ್ಯ ಕ್ಷೇತ್ರವೂ ಒಂದು ಅನ್ನುವುದು ವಿಶೇಷ. ಬೊಮ್ಮಾಯಿ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಭರಪೂರ ಕೊಡುಗೆಯನ್ನು ನೀಡಲಾಗಿದೆ.
ಆರೋಗ್ಯ ಕ್ಷೇತ್ರಕ್ಕೆ ಏನೇನು ಸಿಕ್ತು?
ಸಾರ್ವಜನಿಕರಿಗೆ ದ್ವಿತೀಯ ಹಾಗೂ ತೃತೀಯ ಆರೈಕೆ ಸೇವೆಗಳನ್ನು ಒದಗಿಸಲು 2022-23ನೇ ಸಾಲಿನಲ್ಲಿ ಜಯದೇವ ಸಂಸ್ಥೆಯ ಅಡಿಯಲ್ಲಿ 263 ಕೋಟಿ ರೂ. ವೆಚ್ಚದಲ್ಲಿ, ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ 50 ಹಾಸಿಗೆ ಸಾಮರ್ಥ್ಯ ಹಾಗೂ ಹುಬ್ಬಳ್ಳಿಯಲ್ಲಿ 430 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಕಾರವಾರದಲ್ಲಿ ಪ್ರಗತಿಯಲ್ಲಿರುವ 450 ಹಾಸಿಗೆ ಸಾಮರ್ಥ್ಯದ ನಿರ್ಮಾಣವನ್ನು ಪೂರ್ಣಗೊಳಿಸಲಾಗುವುದು. ಬೆಂಗಳೂರಿನ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.
‘ಮನೆ ಮನೆಗೆ ಆರೋಗ್ಯ’ ಆರೋಗ್ಯ ಶಿಬಿರ
‘ಮನೆ ಮನೆಗೆ ಆರೋಗ್ಯ’ ಎಂಬ ಕಾರ್ಯಕ್ರಮದಡಿಯಲ್ಲಿ ರಾಜ್ಯದ ಗ್ರಾಮೀಣ ಜನತೆಗೆ 2023-24ನೇ ಸಾಲಿನಲ್ಲಿ ಎರಡು ಬಾರಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರಗಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಆಯೋಜಿಸಲಾಗುವುದು. ಇದರಿಂದ ತೀವ್ರವಾದ ಕಾಯಿಲೆಗಳನ್ನು ಆರಂಭದಲ್ಲಿಯೇ ಪತ್ತೆಹಚ್ಚಿ ಜನರ ಆರೋಗ್ಯ ಕಾಪಾಡುವ ಗುರಿ ಹೊಂದಲಾಗಿದೆ. ಇದರೊಂದಿಗೆ ಈ ಯೋಜನೆಯಡಿ ದೀರ್ಘಕಾಲಿಕ ಕಾಯಿಲೆಗಳಿಂದ ಬಳಲುತ್ತಿರುವವರ ಮನೆ ಬಾಗಿಲಿಗೆ ಔಷಧಿಗಳನ್ನು ಕ್ರಮವಹಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.


















