ಬೆಂಗಳೂರು: ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ಅವರು ಶುಕ್ರವಾರ ಸನ್ಯಾಸ ದೀಕ್ಷೆ ಸ್ವೀಕರಿಸಿದರು. ಪುಟ್ಟಸ್ವಾಮಿ ಅವರಿಗೆ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳೆಂದು ನಾಮಕರಣ ಮಾಡಿ ಕೈಲಾಸ ಆಶ್ರಮ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ಜಯೇಂದ್ರಪುರಿ ಮಹಾಸ್ವಾಮಿಗಳು ಸನ್ಯಾಸ ದೀಕ್ಷೆ ನೀಡಿದರು.
ಮೇ 8ರಂದು ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿರುವ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠಕ್ಕೆ ತೆರಳಲಿದ್ದು, ಮೇ 15ರಂದು ಪ್ರಥಮ ಪೀಠಾಧಿಪತಿಯಾಗಿ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳು ಅಲಂಕೃತಗೊಳ್ಳಲಿದ್ದಾರೆ. ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ ಎಸ್.ಎಂ. ಕೃಷ್ಣ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಸೇರಿ ಹಲವು ಸಚಿವರು ಭಾಗವಹಿಸಲಿದ್ದಾರೆ. 20 ಮಠಾಧೀಶರು ದಿವ್ಯ ಸಾನಿಧ್ಯ ವಹಿಸಿಲಿದ್ದಾರೆ. ಬಿ.ಜೆ.ಪುಟ್ಟಸ್ವಾಮಿ ಅವರು ಕರ್ನಾಟಕ ರಾಜ್ಯ ನೀತಿ ಮತ್ತುಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಏ.30ರಂದು ರಾಜೀನಾಮೆ ನೀಡಿದ್ದರು. ಮಂಡ್ಯದ ಪುಟ್ಟಸ್ವಾಮಿಯವರು ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಸಹಕಾರ ಸಚಿವರಾಗಿ ಕೆಲಸ ನಿರ್ವಹಿಸಿದ್ದರು.


















